ಬೆಂಗಳೂರು:01.ಅಕ್ಟೋಬರ್, ಕರಾವಳಿ ಮೂಲದ ಶ್ರೀ ಸತ್ಯ ಸಾರಮಾನಿ ಕಾನದ ಕಟದರನ್ನು ಕುಲದೈವವಾಗಿ ಆರಾಧಿಸುವ ಆದಿದ್ರಾವಿಡ ಸಮುದಾಯದ ಅಲೇರಿ ಮೂಲಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ₹10 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಭರವಸೆ ನೀಡಿದ್ದಾರೆ.
ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಆದಿದ್ರಾವಿಡ ಸಮುದಾಯದ ಪ್ರತಿನಿಧಿಗಳು ಅಲೇರಿ ಮೂಲಕ್ಷೇತ್ರದ ಅಭಿವೃದ್ಧಿ ಹಾಗೂ ಸಮುದಾಯದ ವಿವಿಧ ಬೇಡಿಕೆಗಳ ಕುರಿತು ಸಚಿವರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೆ.ಎಚ್. ಮುನಿಯಪ್ಪ ಅವರು, ಅಲೇರಿ ಕ್ಷೇತ್ರವು ಐತಿಹಾಸಿಕ ಹಿನ್ನೆಲೆಯುಳ್ಳ ಕ್ಷೇತ್ರವಾಗಿದ್ದು, ಕೇವಲ ಧಾರ್ಮಿಕ ಕ್ಷೇತ್ರವಾಗಿ ಮಾತ್ರವಲ್ಲದೆ ಸಮುದಾಯದ ಶಕ್ತಿಕೇಂದ್ರವಾಗಿ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಕ್ಷೇತ್ರದಲ್ಲಿ ತರಬೇತಿ ಕೇಂದ್ರ, ಸಮುದಾಯ ಭವನ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಈ ಉದ್ದೇಶಕ್ಕಾಗಿ ಅಗತ್ಯವಿರುವ ₹10 ಕೋಟಿ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅಲ್ಲದೆ, ಶೀಘ್ರವೇ ವಿಸ್ತೃತ ಯೋಜನಾ ವರದಿ ಸಲ್ಲಿಸುವಂತೆ ಸೂಚಿಸಿದರು. ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ಜಮೀನು ಖರೀದಿಗೂ ಸೂಕ್ತ ಅನುದಾನ ಒದಗಿಸುವುದಾಗಿ ಸಚಿವರು ತಿಳಿಸಿದರು.
ಕುಲಶಾಸ್ತ್ರೀಯ ಅಧ್ಯಯನಕ್ಕೆ ಅನುದಾನ
ಆದಿದ್ರಾವಿಡ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಸೂಕ್ತ ಅನುದಾನ ಒದಗಿಸಲಾಗುವುದು. ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಕೇಂದ್ರದ ಮೂಲಕ ಈ ಅಧ್ಯಯನ ಕೈಗೊಳ್ಳಲು ಕ್ರಮ ವಹಿಸಲಾಗುವುದು ಎಂದು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಡಿಸಿ ಮನ್ನಾ ಜಮೀನು ಹಂಚಿಕೆಗೆ ಕ್ರಮ
ಇದೇ ಸಂದರ್ಭದಲ್ಲಿ ಕಳೆದ ಮೂರೂವರೆ ದಶಕಗಳಿಂದ ಬಾಕಿ ಇರುವ ಡಿಸಿ ಮನ್ನಾ ಜಮೀನು ಹಂಚಿಕೆ ವಿಚಾರವನ್ನು ಸಮುದಾಯದ ಮುಖಂಡರು ಸಚಿವರ ಗಮನಕ್ಕೆ ತಂದರು. ಈ ಬೇಡಿಕೆಯನ್ನು ಪರಿಶೀಲಿಸಿದ ಸಚಿವರು, ಡಿಸಿ ಮನ್ನಾ ಜಮೀನು ಹಂಚಿಕೆ ಕುರಿತು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ತಕ್ಷಣ ಆದೇಶ ನೀಡುವುದಾಗಿ ಭರವಸೆ ನೀಡಿದರು.
ಸಂವಾದದಲ್ಲಿ ಆದಿದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್ ಮೂಡಬಿದಿರೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ನೀಲಯ್ಯ ಗಾಳಿಗುಡ್ಡೆ, ಗೌರವಾಧ್ಯಕ್ಷ ಸುರೇಶ್ ಹಾರ್ಡಿಕೊಪ್ಪ, ರಾಜ್ಯ ಉಪಾಧ್ಯಕ್ಷ ಕೃಷ್ಣಪ್ಪ ಜಾವಳಿ ಸೇರಿದಂತೆ ಹಲವು ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಲೇರಿ ಮೂಲ ಕ್ಷೇತ್ರಕ್ಕೆ- 10 ಕೋಟಿ ಅನುದಾನ ಘೋಷಣೆ.. ಸಚಿವ ಕೆಎಚ್ ಮುನಿಯಪ್ಪ.
GNE UPDATES
ಇತ್ತೀಚಿನ ಸುದ್ದಿ